Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

195 ತಾಲ್ಲೂಕುಗಳಲ್ಲಿ ಬರ ಘೋಷಿಸಲು ಸಿಎಂಗೆ ಶಿಫಾರಸು

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.13: ಮಳೆಯ ತೀವ್ರ ಕೊರತೆಯಿಂದ ತತ್ತರಿಸಿರುವ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸಂಪುಟ ಉಪಸಮಿತಿ ಮುಖ್ಯಮಂತ್ರಿಗೆ ಶಿಫಾರಸು ಮಾಡಿದೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ (ಗ್ರೌಂಡ್ ಟ್ರುತಿಂಗ್) ನಡೆಸಲಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ 161 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ. ಇದಲ್ಲದೆ, 34 ತಾಲೂಕುಗಳಲ್ಲೂ ಸ್ಥಿತಿ ಚಿಂತಾಜನಕವಾಗಿದ್ದು ಕೇಂದ್ರ ಮಾರ್ಗಸೂಚಿ ಅನ್ವಯಿಸದಿದ್ದರೂ ಈ ತಾಲೂಕುಗಳನ್ನೂ ಸಹ ಪಟ್ಟಿಗೆ ಸೇರಿಸಲಾಗಿದೆ. ಈ ಬಗ್ಗೆ ಇಂದು ನಡೆದ ಐದನೇ ಸಂಪುಟ ಉಪಸಮಿತಿ ಸಭೆಯಲ್ಲಿ ಸಂಬಂಧಿತ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬರ ಘೋಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಬರ ಘೋಷಣೆಗೆ ಶಿಫಾರಸು ಮಾಡಿದ ಬೆನ್ನಲ್ಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಹ ಸರ್ಕಾರ ಸಿದ್ಧತೆ ನಡೆಸಿದೆ. ಮುಂದಿನ ಎಂಟು-ಹತ್ತು ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.

40 ತಾಲೂಕುಗಳಲ್ಲೂ ಭಾಗಶಃ ಬರ:

ಶಿಫಾರಸು ಮಾಡಲಾದ 195 ತಾಲೂಕುಗಳ ಹೊರತಾಗಿ 40 ತಾಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ, ಈ ತಾಲೂಕುಗಳನ್ನೂ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಹೀಗಾಗಿ 15 ದಿನಗಳ ನಂತರ ಸ್ಯಾಟಲೈಟ್ ಇಮೇಜ್ ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ವೇಳೆ ಸಮೀಕ್ಷೆಗೆ ಒಳಪಟ್ಟ ತಾಲೂಕು ‘ಕೇಂದ್ರದ ಬರ ಮಾರ್ಗಸೂಚಿ’ಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದರು.

ಅಕ್ಟೋಬರ್ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶವೂ ಇದೆ. ಹೀಗಾಗಿ ಈಗ ತಿಳಿಸಿರುವ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ “ಬರ ಪೀಡಿತ” ಎಂದು ಘೋಷಿಸಲಾಗುವುದು. ಈ ಬಗ್ಗೆ ಕೇಂದ್ರಕ್ಕೆ ಮತ್ತೊಂದು ಮನವಿ (ಮೆಮೊರಾಂಡಮ್) ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಈಗಾಗಲೇ ಪ್ರತಿ ತಾಲೂಕುಗಳಲ್ಲೂ ಟಾಸ್ಕ್ ಫೋರ್ಸ್ ರಚನೆಗೆ ಸಿದ್ದತೆ ನಡೆಸಲಾಗಿದೆ. ಅಲ್ಲದೆ, ಬರ ಘೋಷಿಸುತ್ತಿದ್ದಂತೆ, ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ 100 ದಿನಗಳ ಮಾನವ ದಿನವನ್ನು 150 ದಿನಕ್ಕೆ ಹೆಚ್ಚಿಸಲಾಗುವುದು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ನೀರಿಗೂ, ಮೇವಿಗೂ ಕೊರತೆ ಇಲ್ಲ:

ರಾಜ್ಯದಲ್ಲಿ ಸದ್ಯಕ್ಕೆ ಕುಡಿಯುವ ನೀರಿಗೆ ತೀವ್ರ ಅಭಾವ ಇಲ್ಲ. ಕುಡಿಯುವ ನೀರಿನ ಪೂರೈಕೆ ಸಲುವಾಗಿಯೇ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಓಗಳ ಖಾತೆಗೆ ಈಗಾಗಲೇ ಒಂದು ಕೋಟಿ ರೂ. ಹಣ ವರ್ಗಾಯಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 462 ಕೋಟಿ ಹಣ ಇದೆ. ಈ ಹಣವನ್ನು ಕುಡಿಯುವ ನೀರು ಪೂರೈಕೆಗೆ ಬಳಸಲು ಸೂಚಿಸಲಾಗಿದೆ. ಮತ್ತಷ್ಟು ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಗತ್ಯವಿದ್ದ ಸ್ಥಳಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಬೋರ್ ಗಳ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಹಕಾರ ಸಚಿವರಾದ ಎನ್ ರಾಜಣ್ಣ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಮುಖ್ಯ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸೇರಿದಂತೆ ಸಂಬಂಧಿತ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ